ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕ್ರಿಶ್ಚಿಯನ್ ಧರ್ಮ ಹಾಗೂ ಬೇರೆ ಯಾವುದೇ ಇತರ ಧರ್ಮಕ್ಕೆ ಮತಾಂತರಗೊಂಡರೆ ಅವರು ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ರಕ್ಷಣೆ ಕೇಳುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ಪಿಕೆ ಮಿಶ್ರಾ ಮತ್ತು ಮನಮೋಹನ್ ಅವರ ಪೀಠವು ತೀರ್ಪು ನೀಡಿದೆ.
ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮವನ್ನು ಪ್ರತಿಪಾದಿಸುವ ಯಾವುದೇ ವ್ಯಕ್ತಿ ಪರಿಶಿಷ್ಟ ಜಾತಿಯ ಸದಸ್ಯರಾಗಿರುವುದಿಲ್ಲ. ಬೇರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿಯ ಸ್ಥಾನಮಾನ ಕಳೆದುಕೊಳ್ಳುತ್ತಾರೆ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಆಂಧ್ರಪ್ರದೇಶ ಹೈಕೋರ್ಟ್‌ನ ಮೇ 2025ರ ತೀರ್ಪಿನ ವಿರುದ್ಧ ಆನಂದ್ ಎಂಬ ಪಾದ್ರಿ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಈ ತೀರ್ಪು ನೀಡಲಾಗಿದೆ. ಆನಂದ್ ಅವರು ಅಕ್ಕಲ ರಾಮಿರೆಡ್ಡಿ ಮತ್ತು ಇತರರಿಂದ ಜಾತಿ ತಾರತಮ್ಯ ಮತ್ತು ನಿಂದನೆಯನ್ನು ಎದುರಿಸಿದ್ದಾರೆ ಎಂದು ಆರೋಪಿಸಿ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಿದರು. ಪೊಲೀಸರು ಅದರ ಆಧಾರದ ಮೇಲೆ FIR ದಾಖಲಿಸಿದ್ದರು.
ನಂತರ ರಾಮಿರೆಡ್ಡಿ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೋದರು. ಆನಂದ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ತಮ್ಮ ಎಸ್‌ಸಿ ಸ್ಥಾನಮಾನವನ್ನು ಕಳೆದುಕೊಂಡಿದ್ದಾರೆ ಮತ್ತು ಆದ್ದರಿಂದ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎನ್ ಹರಿನಾಥ್ ಎಫ್‌ಐಆರ್ ರದ್ದುಗೊಳಿಸಿದರು. ನಂತರ ಆನಂದ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು
